ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಣಿಪಾಲದಲ್ಲಿ ಬೃಹತ್ ಪ್ರತಿಭಟನೆ
ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ಕಿಟ್ ಖರೀದಿ ಹಾಗೂ ಉಚಿತ ಆರೋಗ್ಯ ತಪಾಸಣೆಯ ಹೆಸರಿನಲ್ಲಿ ನಡೆದಿರುವ ಭ್ರಷ್ಟಾಚಾರದ ಕುರಿತು ಸಮಗ್ರ ತನಿಖೆ ನಡೆಸಬೇಕು ಮತ್ತು ಜಿಲ್ಲೆಯಲ್ಲಿ ತಕ್ಷಣ ಮರಳುಗಾರಿಕೆ ಆರಂಭಿಸಬೇಕು ಎಂಬ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಕಟ್ಟಡ ನಿರ್ಮಾಣ ಕಾರ್ಮಿಕರು ಸೋಮವಾರ ಮಣಿಪಾಲದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಮಣಿಪಾಲದ ಉಪೇಂದ್ರ ಪೈ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಕಾರ್ಮಿಕರು, ಕಚೇರಿ ಎದುರು ಧರಣಿ ನಡೆಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.
ಧರಣಿಯನ್ನುದ್ದೇಶಿಸಿ ಮಾತನಾಡಿದ ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ಕಿಟ್ ಖರೀದಿ ಹಾಗೂ ಆರೋಗ್ಯ ತಪಾಸಣೆಯ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆದಿದೆ ಎಂಬ ಗಂಭೀರ ಆರೋಪಗಳಿದ್ದರೂ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿಲ್ಲ. ಬದಲಾಗಿ ಕಿಟ್ ಖರೀದಿಗೆ ಮಂಡಳಿ ಆದ್ಯತೆ ನೀಡುತ್ತಿದೆ ಎಂದು ಆರೋಪಿಸಿದರು.
ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನದ ಅರ್ಜಿಗಳನ್ನು ಕುಟುಂಬದ ಆಪ್ ಆಧಾರದಲ್ಲಿ ತಿರಸ್ಕರಿಸಲಾಗುತ್ತಿದ್ದು, ಇದು ಮಂಡಳಿಯ ನಿಯಮಗಳಿಗೆ ವಿರುದ್ಧವಾಗಿದೆ. ಈ ಅನ್ಯಾಯದ ವಿರುದ್ಧ ಸಂಘಟಿತ ಕಾನೂನು ಹೋರಾಟ ನಡೆಸಿ, ಭ್ರಷ್ಟಾಚಾರದಲ್ಲಿ ಭಾಗಿಯಾದವರನ್ನು ಬಂಧಿಸುವಂತೆ ಮಾಡಬೇಕಿದೆ. ಜಿಲ್ಲೆಯಲ್ಲಿ ಮರಳುಗಾರಿಕೆ ಆರಂಭಿಸಲು ಜಿಲ್ಲಾಡಳಿತ ಪರಿಣಾಮಕಾರಿ ಕ್ರಮ ಕೈಗೊಳ್ಳದಿರುವುದರಿಂದ ಸಾವಿರಾರು ಕಟ್ಟಡ ಕಾರ್ಮಿಕ ಕುಟುಂಬಗಳು ಉದ್ಯೋಗವಿಲ್ಲದೆ ಸಂಕಷ್ಟಕ್ಕೆ ಸಿಲುಕಿವೆ. ಮರಳು ಸಮಸ್ಯೆ ಕುರಿತು ಗಣಿ ಇಲಾಖೆಯನ್ನು ಸಂಪರ್ಕಿಸಿದರೆ ಜಿಲ್ಲಾಧಿಕಾರಿಗಳ ಕಡೆಗೆ ಬೆರಳು ತೋರಿಸಲಾಗುತ್ತಿದೆ. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ. ಎಂ-ಸ್ಯಾಂಡ್ ವ್ಯವಹಾರದ ಹಿತಾಸಕ್ತಿಯಿಂದ ಜನರಿಗೆ ಕಡಿಮೆ ದರದಲ್ಲಿ ಮರಳು ದೊರೆಯದಂತೆ ಮಾಡಲಾಗುತ್ತಿದೆ ಎಂಬ ಆರೋಪಗಳೂ ಕೇಳಿಬರುತ್ತಿವೆ. ಶಾಸಕರು ಕೂಡ ಸಮಸ್ಯೆ ಪರಿಹಾರಕ್ಕೆ ಆಸಕ್ತಿ ತೋರುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಉಡುಪಿ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಶಶಿಧರ್ ಗೊಲ್ಲ ಮಾತನಾಡಿ, ಕಾರ್ಮಿಕ ಇಲಾಖೆಯಲ್ಲಿ ಕಾರ್ಮಿಕರ ಪರವಾಗಿ ಕೆಲಸಗಳು ನಡೆಯುತ್ತಿಲ್ಲ. ನೈಜ ಕಟ್ಟಡ ಕಾರ್ಮಿಕರ ಗುರುತಿನ ಚೀಟಿಗಳನ್ನು ರದ್ದುಗೊಳಿಸಲಾಗುತ್ತಿದೆ. ಈ ಕುರಿತು ಸಂಘಟನೆಯಿಂದ ಹಲವು ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಕಟ್ಟಡ ಕಾರ್ಮಿಕರ ಉದ್ಯೋಗಕ್ಕೆ ತೀವ್ರ ತೊಂದರೆ ಉಂಟುಮಾಡಿರುವ 9/11 ಸಮಸ್ಯೆಯೂ ಇನ್ನೂ ಬಗೆಹರಿದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರ ಮನವಿ ಸ್ವೀಕರಿಸಲು ಆಗಮಿಸಿದ ಅಪರ ಜಿಲ್ಲಾಧಿಕಾರಿಯವರ ಮುಂದೆ ಕಾರ್ಮಿಕರು ಮರಳುಗಾರಿಕೆ ಆರಂಭವಾಗದಿರುವ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಮಸ್ಯೆಗೆ ಪರಿಹಾರ ದೊರೆಯುವವರೆಗೆ ಪ್ರತಿಭಟನಾ ಸ್ಥಳದಿಂದ ಕದಲುವುದಿಲ್ಲ ಹಾಗೂ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸಬೇಕು ಎಂದು ಪಟ್ಟುಹಿಡಿದರು.
ನಂತರ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದ ಅಪರ ಜಿಲ್ಲಾಧಿಕಾರಿಯವರು, ನವೆಂಬರ್ 25ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಜಂಟಿ ಸಭೆ ನಡೆಸಿ ಮರಳುಗಾರಿಕೆ ಸೇರಿದಂತೆ ಸಂಬಂಧಿತ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಈ ಹಿನ್ನೆಲೆಯಲ್ಲಿ ನ.25ರಂದು ಜಂಟಿ ಸಭೆ ನಡೆಸಿ ಅಂದೇ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಇಲ್ಲವಾದಲ್ಲಿ ನವೆಂಬರ್ 26ರಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಕಾರ್ಮಿಕರು ಎಚ್ಚರಿಕೆ ನೀಡಿದರು.
ಇದೇ ಸಂದರ್ಭದಲ್ಲಿ ಬಿಸಿಯೂಟ ನೌಕರರೂ ಪ್ರತಿಭಟನೆ ನಡೆಸಿ ಯೋಜನಾಧಿಕಾರಿಯವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ವಿ., ಸುಭಾಶ್ಚಂದ್ರ ನಾಯಕ್, ಚಿಕ್ಕ ಮೊಗವೀರ, ರಾಜೀವ ಪಡುಕೋಣೆ, ದಯಾನಂದ ಕೋಟ್ಯಾನ್, ಉಮೇಶ್ ಕುಂದರ್, ರಾಮ ಕಾರ್ಕಡ, ನಾಗರತ್ನ ಪಡುವರಿ, ಗೋಪಾಲಕೃಷ್ಣ, ಶ್ರೀಧರ ಉಪ್ಪುಂದ, ಸಯ್ಯದ್ ಸೇರಿದಂತೆ ಹಲವು ಕಾರ್ಮಿಕ ಮುಖಂಡರು ಭಾಗವಹಿಸಿದ್ದರು. ಗಣೇಶ್ ತೊಂಡೆಮಕ್ಕಿ ಸ್ವಾಗತಿಸಿ ವಂದಿಸಿದರು.

