ವಕೀಲರ ಮೇಲಿನ ಹಲ್ಲೆ ಪ್ರಕರಣ ತಡೆಗೆ ಸೂಕ್ತ ಭದ್ರತೆ ಒದಗಿಸಲು ಆಗ್ರಹಿಸಿ ಡಿಸಿ, ಎಸ್ಪಿ ಗೆ ಮನವಿ
Tuesday, November 03, 2026
ರಾಜ್ಯದಲ್ಲಿ ವಕೀಲರ ಮೇಲಿನ ಹಲ್ಲೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಕೀಲರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸಿ ಉಡುಪಿಯ ವಕೀಲರು ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಹಶೀಲ್ದಾರ್ ಮೂಲಕ ಜಿಲ್ಲಾಡಳಿತಕ್ಕೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ವಕೀಲರ ಮೇಲೆ ನಡೆಯುತ್ತಿರುವ ಹಲ್ಲೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ವಕೀಲರ ವೃತ್ತಿಪರ ಸುರಕ್ಷತೆಗೆ ಅಗತ್ಯ ಭದ್ರತೆ ಕಲ್ಪಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಸೂಕ್ತ ಎಚ್ಚರಿಕೆ ಹಾಗೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.
ಈ ನಿಯೋಗದಲ್ಲಿ ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಸಂಚಾಲಕರು ಹಾಗೂ ಯು-ಆಕ್ಟ್ ಸಂಸ್ಥಾಪಕರಾದ ನ್ಯಾಯವಾದಿ ಪ್ರೇಮ್ ಪ್ರಸಾದ್ ಶೆಟ್ಟಿ, ವಕೀಲರ ಸಂಘದ ಉಡುಪಿ ಘಟಕದ ಕಾರ್ಯದರ್ಶಿ ಚಂದ್ರಶೇಖರ್ ಶೆಟ್ಟಿ, ಉಪಾಧ್ಯಕ್ಷ ದೇವದಾಸ ಶೆಟ್ಟಿಗಾರ್, ಆನಂದ ಮಡಿವಾಳ, ಅಖಿಲ್ ಹೆಗ್ಡೆ ಸೇರಿದಂತೆ ಹಲವು ವಕೀಲರು ಉಪಸ್ಥಿತರಿದ್ದರು.
