-->
 ಬೆಂಗಳೂರಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಬೈಂದೂರಿನ ಟೆಕ್ಕಿ ಅಪಘಾತದಲ್ಲಿ ಸಾವು

ಬೆಂಗಳೂರಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಬೈಂದೂರಿನ ಟೆಕ್ಕಿ ಅಪಘಾತದಲ್ಲಿ ಸಾವು


ಉದ್ಯೋಗ ನಿಮಿತ್ತ ಬೈಕ್‌ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಬೈಂದೂರು ತಾಲೂಕಿನ ಚುಂಗಿಗುಡ್ಡೆ ನಿವಾಸಿ ಯುವ ಟೆಕ್ಕಿಯೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಸಮೀಪ ಸಂಭವಿಸಿದೆ.

ಮೃತರನ್ನು ಚುಂಗಿಗುಡ್ಡೆ ನಿವಾಸಿ ನಾರಾಯಣ ಹೆಬ್ಬಾರ್ ಅವರ ಪುತ್ರ ಅಕ್ಷಯ್ ಎನ್. ಹೆಬ್ಬಾರ್ (26) ಎಂದು ಗುರುತಿಸಲಾಗಿದೆ.

ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಅಕ್ಷಯ್ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗದಲ್ಲಿದ್ದರು. ವರ್ಕ್ ಫ್ರಮ್ ಹೋಮ್ ಮೂಲಕ ಕೆಲಸ ನಿರ್ವಹಿಸುತ್ತಿದ್ದ ಅವರು, ತಿಂಗಳಿಗೊಮ್ಮೆ ಕಚೇರಿಗೆ ತೆರಳುವ ಉದ್ದೇಶದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು.

ಭಾನುವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಚುಂಗಿಗುಡ್ಡೆಯ ಮನೆಯಿಂದ ಬೈಕ್‌ನಲ್ಲಿ ಬೆಂಗಳೂರಿನತ್ತ ಪ್ರಯಾಣ ಆರಂಭಿಸಿದ್ದರು. ಪ್ರಯಾಣದ ನಡುವೆ ಅಪಘಾತ ಸಂಭವಿಸುವುದಕ್ಕೂ ಮುನ್ನ ತಾಯಿಗೆ ದೂರವಾಣಿ ಕರೆ ಮಾಡಿದ್ದರು ಎನ್ನಲಾಗಿದೆ. ಚನ್ನರಾಯಪಟ್ಟಣ ಸಮೀಪ ಟ್ರಕ್‌ಗೆ ಬೈಕ್‌ನ ಹ್ಯಾಂಡಲ್ ಭಾಗ ತಾಗಿ, ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. 

ಅಕ್ಷಯ್ ಸೌಮ್ಯ ಸ್ವಭಾವದ ಯುವಕನಾಗಿದ್ದು, ಕುಟುಂಬದವರೊಂದಿಗೆ ಅತ್ಯಂತ ಆತ್ಮೀಯ ಬಾಂಧವ್ಯ ಹೊಂದಿದ್ದರು. ಪ್ರತಿದಿನ ಸಂಜೆ ತಾಯಿಯೊಂದಿಗೆ ಚುಂಗಿಗುಡ್ಡೆ ರಸ್ತೆಯಲ್ಲಿ ವಾಕಿಂಗ್ ಮಾಡುವುದು ಅವರ ದಿನಚರಿಯಾಗಿತ್ತು. ತಂದೆ-ತಾಯಿಯ ಏಕೈಕ ಪುತ್ರನಾಗಿದ್ದ ಅಕ್ಷಯ್ ಕುಟುಂಬದ ಭರವಸೆಯಾಗಿದ್ದರು. ಯುವಕನ ಅಕಾಲಿಕ ನಿಧನಕ್ಕೆ ಕುಟುಂಬಸ್ಥರು ಹಾಗೂ ಸ್ಥಳೀಯರು ಸಂತಾಪ ಸೂಚಿಸಿದ್ದಾರೆ.

Ads on article

Advertise in articles 1

advertising articles 2

Advertise under the article